ರಾಜ್ಯಾದ್ಯಂತ ಮಸೀದಿಯಲ್ಲಿ ಧ್ವನಿವರ್ಧಕ ಮೂಲಕ ಆಜಾನ್‌ ಕೂಗುವುದಕ್ಕೆ ನಿರ್ಬಂಧ ಹೇರಲು ಸರ್ಕಾರಿ ಪ್ರಾಧಿಕಾರಗಳಿಗೆ ನಿರ್ದೇಶಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿ ಪುರಸ್ಕರಿಸಲು ನಿರಾಕರಿಸಿರುವ ಹೈಕೋರ್ಟ್‌, ಆಜಾನ್‌ನಿಂದ ಜನರ ಮೂಲಭೂತ ಹಕ್ಕು ಮೊಟಕುಗೊಳ್ಳುವುದಿಲ್ಲ ಎಂದು ಅಭಿಪ್ರಾಯಪಟ್ಟಿದೆ.

ಬೆಂಗಳೂರು (ಆ.23): ರಾಜ್ಯಾದ್ಯಂತ ಮಸೀದಿಯಲ್ಲಿ ಧ್ವನಿವರ್ಧಕ ಮೂಲಕ ಆಜಾನ್‌ ಕೂಗುವುದಕ್ಕೆ ನಿರ್ಬಂಧ ಹೇರಲು ಸರ್ಕಾರಿ ಪ್ರಾಧಿಕಾರಗಳಿಗೆ ನಿರ್ದೇಶಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿ ಪುರಸ್ಕರಿಸಲು ನಿರಾಕರಿಸಿರುವ ಹೈಕೋರ್ಟ್‌, ಆಜಾನ್‌ನಿಂದ ಜನರ ಮೂಲಭೂತ ಹಕ್ಕು ಮೊಟಕುಗೊಳ್ಳುವುದಿಲ್ಲ ಎಂದು ಅಭಿಪ್ರಾಯಪಟ್ಟಿದೆ. ಇದೇ ವೇಳೆ ಧ್ವನಿವರ್ಧಕಗಳು ನಿಗದಿತ ಡೆಸಿಬಲ್‌ಗಿಂತ ಹೆಚ್ಚಿನ ಶಬ್ದವಾಗದಂತೆ ಸರ್ಕಾರಿ ಪ್ರಾಧಿಕಾರಗಳು ಅಗತ್ಯ ಕ್ರಮ ಜರುಗಿಸಬೇಕು ಎಂದು ನ್ಯಾಯಪೀಠ ಇದೇ ವೇಳೆ ನಿರ್ದೇಶಿಸಿದೆ. 

ಈ ಕುರಿತು ನಗರದ ನಾಗರಭಾವಿ ನಿವಾಸಿ ಆರ್‌. ಚಂದ್ರಶೇಖರ್‌ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮರ್ತಿ ಅಲೋಕ್‌ ಆರಾಧೆ ಅವರ ನೇತೃತ್ವದ ವಿಭಾಗೀಯ ಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿತು. ಆಜಾನ್‌ ಕೂಗುವುದರಿಂದ ಉಂಟಾಗುವ ಶಬ್ದದಿಂದಾಗಿ ಇತರ ಜನರ ಮೂಲಭೂತ ಹಕ್ಕುಗಳು ಉಲ್ಲಂಘನೆಯಾಗುತ್ತದೆ ಎಂಬ ಅರ್ಜಿದಾರರ ವಾದ ಒಪ್ಪದ ಹೈಕೋರ್ಟ್‌, ಸಂವಿಧಾನದ ಪರಿಚ್ಛೇದ 25(1)ರ ಅಡಿಯಲ್ಲಿ ಪ್ರತಿಯೊಬ್ಬ ವ್ಯಕ್ತಿಯೂ ತನ್ನ ಧರ್ಮವನ್ನು ಆಚರಿಸುವ, ಪ್ರದರ್ಶಿಸುವ ಮತ್ತು ಪ್ರಚಾರ ಮಾಡುವ ಹಕ್ಕು ಹೊಂದಿರುತ್ತಾನೆ ಎಂದು ತಿಳಿಸಿದರು. 

ಸಕಾರಣಕ್ಕೆ ಮಗು ಬೇಡ ಎಂದರೆ ಕ್ರೌರ್ಯ ಅಲ್ಲ: ಹೈಕೋರ್ಟ್‌

ಈ ಹಕ್ಕು ಇದ್ದರೂ ಸಾರ್ವಜನಿಕ ಆದೇಶ, ನೈತಿಕತೆ ಮತ್ತು ಆರೋಗ್ಯ ಕಾರಣಗಳಿಂದ ಈ ಹಕ್ಕನ್ನು ನಿಯಂತ್ರಿಸಬಹುದು ಎಂದೂ ತಿಳಿಸಿತು. ಅಲ್ಲದೆ, ಅರ್ಜಿದಾರರು ಸೇರಿದಂತೆ ಪ್ರತಿಯೊಬ್ಬರೂ ಸಹ ತಮ್ಮ ಧರ್ಮ ಆಚರಿಸಬಹುದು ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ. ಆಜಾನ್‌ ಎಂಬುದು ಇಸ್ಲಾಂ ಧರ್ಮದವರಿಗೆ ಪ್ರಾರ್ಥನೆ ಸಲ್ಲಿಸಲು ನೀಡುವ ಕರೆ ಮತ್ತು ಅರ್ಜಿದಾರರೇ ತಮ್ಮ ಅರ್ಜಿಯಲ್ಲಿ ಹೇಳಿರುವಂತೆ ಇಸ್ಲಾಂ ಧರ್ಮದ ವ್ಯಕ್ತಿಗೆ ಆಜಾನ್‌ ಎಂಬುದು ಅತ್ಯಗತ್ಯ ಧಾರ್ಮಿಕ ಆಚರಣೆಯಾಗಿದೆ ಎಂದು ನ್ಯಾಯಪೀಠ ಆದೇಶದಲ್ಲಿ ಹೇಳಿತು. 

ಆಜಾನ್‌ ಕೂಗುವುದು ಮುಸ್ಲಿಮರ ಅತ್ಯಗತ್ಯ ಧಾರ್ಮಿಕ ಆಚರಣೆಯಾಗಿದ್ದರೂ, ಅದರಲ್ಲಿ ಬಳಸುವ ಅಲ್ಲಾಹು ಅಕ್ಬರ್‌ (ಅಲ್ಲಾನೇ ಸರ್ವಶ್ರೇಷ್ಠ) ಎಂಬ ಶಬ್ದ ಇತರರ ಧಾರ್ಮಿಕ ನಂಬಿಕಗಳಿಗೆ ಧಕ್ಕೆ ತರುತ್ತದೆ. ಆದ್ದರಿಂದ ರಾಜ್ಯಾದ್ಯಂತ ಮಸೀದಿಯಲ್ಲಿ ಧ್ವನಿವರ್ಧಕ ಮೂಲಕ ಆಜಾನ್‌ ಕೂಗುವುದಕ್ಕೆ ನಿರ್ಬಂಧ ಹೇರಲು ಸರ್ಕಾರ ಮತ್ತು ಸ್ಥಳೀಯ ಸಂಸ್ಥೆಗಳಿಗೆ ನಿರ್ದೇಶಿಸುವಂತೆ ಅರ್ಜಿದಾರರು ಕೋರಿದ್ದರು.

ಅಲೆಮಾರಿಗಳಿಗೆ ಗ್ರಂಥಾಲಯ: ಹೈದರಾಬಾದ್‌- ಕರ್ನಾಟಕ (ಕಲ್ಯಾಣ ಕರ್ನಾಟಕ) ಭಾಗದಲ್ಲಿ ಅಲೆಮಾರಿ ಬುಡಕಟ್ಟು ಸಮುದಾಯಗಳಿಗೆ ಸಾರ್ವಜನಿಕ ಗ್ರಂಥಾಲಯಗಳನ್ನು ಸ್ಥಾಪಿಸುವ ಬಗ್ಗೆ ತ್ವರಿತವಾಗಿ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಹೈಕೋರ್ಟ್‌ ಸೋಮವಾರ ನಿರ್ದೇಶಿಸಿದೆ. ಕರ್ನಾಟಕ ರಾಜ್ಯ ಅಲೆಮಾರಿ ಬುಡಕಟ್ಟು ಸಮುದಾಯಗಳ ಅಭಿವೃದ್ಧಿ ಸಂಘದ ಅಧ್ಯಕ್ಷ ರಾಮಸ್ವಾಮಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್‌ ಆರಾಧೆ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠ ಈ ಸೂಚನೆ ನೀಡಿ ವಿಚಾರಣೆ ಮುಂದೂಡಿತು.

ಪಿಸ್ತೂಲ್‌ ಇಲ್ಲದೆ ಬರೀ ಗುಂಡು ಇಟ್ಟುಕೊಳ್ಳುವುದು ತಪ್ಪಲ್ಲ: ಹೈಕೋರ್ಟ್‌

ಅಲೆಮಾರಿ ಬುಡಕಟ್ಟು ಸಮುದಾಯಗಳು ಹೆಚ್ಚು ವಾಸ ಮಾಡುವ ಜಿಲ್ಲೆಗಳಲ್ಲಿ ಗ್ರಂಥಾಲಯಗಳನ್ನು ಸ್ಥಾಪಿಸುವಂತೆ ಡಾ. ಡಿ.ಎಂ. ನಂಜುಂಡಪ್ಪ ಸಮಿತಿ ಶಿಫಾರಸು ಮಾಡಿತ್ತು. ಅದರಂತೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ಅಲೆಮಾರಿ ಬುಡಕಟ್ಟು ಸಮುದಾಯಗಳು ಈಗಲೂ ಶಿಕ್ಷಣದಿಂದ ವಂಚಿತರಾಗಿದ್ದಾರೆ. ಅದಕ್ಕಾಗಿ ಆ ಭಾಗದ ಜಿಲ್ಲೆಗಳಲ್ಲಿ ಅಲೆಮಾರಿ ಬುಡಕಟ್ಟು ಸಮುದಾಯಗಳಿಗೆ ಗ್ರಂಥಾಲಯಗಳನ್ನು ಸ್ಥಾಪಿಸಬೇಕಿದೆ. ಈ ಕುರಿತು ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಅರ್ಜಿದಾರರು ಕೋರಿದ್ದಾರೆ.