ಅನುದಾನದ ಕೊರತೆಯಿಂದ 50 ಹೊಸ ತಾಲೂಕಲ್ಲಿ ಆಸ್ಪತ್ರೆಯಿಲ್ಲ: ಸಚಿವ ಸುಧಾಕರ್
ಅನುದಾನದ ಕೊರತೆಯಿಂದ 2017-18ನೇ ಸಾಲಿನಲ್ಲಿ ಘೋಷಣೆಯಾದ 50 ಹೊಸ ತಾಲೂಕುಗಳಲ್ಲಿ ತಾಲೂಕು ಆಸ್ಪತ್ರೆ ಕೇಂದ್ರವನ್ನು ನಿರ್ಮಾಣ ಮಾಡಲು ಸಾಧ್ಯವಾಗಿಲ್ಲ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.
ವಿಧಾನಸಭೆ (ಡಿ.23): ಅನುದಾನದ ಕೊರತೆಯಿಂದ 2017-18ನೇ ಸಾಲಿನಲ್ಲಿ ಘೋಷಣೆಯಾದ 50 ಹೊಸ ತಾಲೂಕುಗಳಲ್ಲಿ ತಾಲೂಕು ಆಸ್ಪತ್ರೆ ಕೇಂದ್ರವನ್ನು ನಿರ್ಮಾಣ ಮಾಡಲು ಸಾಧ್ಯವಾಗಿಲ್ಲ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ. ಗುರುವಾರ ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್ ಸದಸ್ಯ ಅನಿಲ್ ಚಿಕ್ಕಮಾದು ಪ್ರಶ್ನೆಗೆ ಉತ್ತರ ನೀಡಿದ ಅವರು, ಮೈಸೂರು ಜಿಲ್ಲೆಯ ಸರಗೂರು ತಾಲೂಕು ಸೇರಿದಂತೆ 2017-18ರಲ್ಲಿ 50 ಹೊಸ ತಾಲೂಕುಗಳನ್ನು ಘೋಷಣೆ ಮಾಡಲಾಯಿತು. ಹೊಸದಾಗಿ ಘೋಷಣೆ ಮಾಡಿರುವ ಯಾವುದೇ ತಾಲೂಕುಗಳಲ್ಲಿ ತಾಲೂಕು ಆಸ್ಪತ್ರೆ ಕೇಂದ್ರಗಳನ್ನು ನಿರ್ಮಾಣ ಮಾಡಲು ಆಗಿಲ್ಲ.
ಅನುದಾನ ಕೊರತೆಯಿಂದ ಮಾಡಲಾಗಿಲ್ಲ ಎಂದು ತಿಳಿಸಿದರು. ಆಸ್ಪತ್ರೆಗಳ ನಿರ್ಮಾಣಕ್ಕೆ ಅಗತ್ಯ ಇರುವ ಭೂಮಿ ನೇರವಾಗಿ ಖರೀದಿಗೆ ಅವಕಾಶ ಇಲ್ಲ. ಭೂಸ್ವಾಧೀನ ಮಾಡಿಕೊಳ್ಳಬೇಕಾಗಿದೆ. ಹೀಗಾಗಿ ಜಿಲ್ಲಾಧಿಕಾರಿಗಳ ಮೂಲಕ ಭೂಸ್ವಾಧೀನ ಮಾಡಿಕೊಳ್ಳಲು ಅವಕಾಶ ಇರುವ ಹಿನ್ನೆಲೆಯಲ್ಲಿ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು. ಎಲ್ಲಾ ಹೊಸ ತಾಲೂಕುಗಳಲ್ಲಿ ಆಸ್ಪತ್ರೆಗಳನ್ನು ನಿರ್ಮಾಣ ಆಗಬೇಕು. ಅನುದಾನಕ್ಕಾಗಿ ಹಣಕಾಸು ಇಲಾಖೆಗೆ ಪ್ರಸ್ತಾಪ ಸಲ್ಲಿಸುತ್ತೇವೆ ಎಂದರು. ಸರಗೂರು ಸಮುದಾಯ ಆರೋಗ್ಯ ಕೇಂದ್ರವನ್ನು 100 ಹಾಸಿಗೆಯ ಸಾರ್ವಜನಿಕ ಆಸ್ಪತ್ರೆಯನ್ನಾಗಿ ಸ್ಥಾಪಿಸಲು ಮತ್ತು ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಸ್ಥಾಪಿಸುವ ಪ್ರಸ್ತಾವನೆ ಪರಿಶೀಲನೆಯಲ್ಲಿದೆ ಎಂದು ಹೇಳಿದರು.
ಶೀಘ್ರ ಕೋವಿಡ್ ಮಾರ್ಗಸೂಚಿ ಬಿಡುಗಡೆ: ಸಚಿವ ಸುಧಾಕರ್
ವಿಶೇಷ ನೇಮಕದಡಿ ಆಯುಷ್ ವೈದ್ಯರ ನಿಯೋಜನೆ: ಆಯುಷ್ ಇಲಾಖೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ವೈದ್ಯರನ್ನು ಕಾಯಂಗೊಳಿಸುವುದು ಕಷ್ಟ. ಆದರೆ, ಅವರನ್ನು ವಿಶೇಷ ನೇಮಕಾತಿಯಡಿ ನಿಯೋಜನೆ ಮಾಡಲಾಗುತ್ತಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ಗುರುವಾರ ಪ್ರಶ್ನೋತ್ತರ ಅವಧಿಯಲ್ಲಿ ಜೆಡಿಎಸ್ ಸದಸ್ಯ ಎ.ಟಿ.ರಾಮಸ್ವಾಮಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಅಲೋಪತಿ ವೈದ್ಯರನ್ನು ವಿಶೇಷ ನೇಮಕಾತಿಯಡಿಯಲ್ಲಿ ನಿಯೋಜನೆಗೆ ಕ್ರಮ ಕೈಗೊಂಡಂತೆ ಆಯುಷ್ ಇಲಾಖೆಯಲ್ಲಿ ಗುತ್ತಿಗೆ ವೈದ್ಯರ ನಿಯೋಜನೆಗೆ ಕ್ರಮ ಕೈಗೊಳ್ಳಲಾಗಿದೆ. ಪ್ರತಿ ವರ್ಷ ಒಂದು ಗ್ರೇಸ್ ಅಂಕ ನೀಡಿ 10 ವರ್ಷಗಳ ಕಾಲ ಸೇವೆ ಸಲ್ಲಿಸಿರುವ ವೈದ್ಯರಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಸ್ತ್ರೀಯರಿಗೆ ಪ್ರತ್ಯೇಕ ‘ಆಯುಷ್ಮತಿ’ ಕ್ಲಿನಿಕ್: ಸಚಿವ ಸುಧಾಕರ್
ಆಯುಷ್ ಇಲಾಖೆಗೆ ಸರ್ಕಾರವು ಹೆಚ್ಚು ಉತ್ತೇಜನ ನೀಡಲಾಗುತ್ತಿದ್ದು, 903 ಹುದ್ದೆಗಳು ಮಂಜೂರಾಗಿವೆ. ಈಪೈಕಿ 694 ಹುದ್ದೆಗಳನ್ನು ಭರ್ತಿಮಾಡಿಕೊಳ್ಳಲಾಗಿದೆ. 209 ಹುದ್ದೆಗಳು ಖಾಲಿ ಇವೆ. ಇದರಲ್ಲಿ 44 ಹುದ್ದೆಗಳಿಗೆ ಗುತ್ತಿಗೆ ಆಧಾರ ಮೇಲೆ ವೈದ್ಯರನ್ನು ನಿಯೋಜನೆ ಮಾಡಲಾಗಿದೆ. ಖಾಲಿ ಹುದ್ದೆಗಳ ನೇಮಕಾತಿ ಮಾಡಿಕೊಳ್ಳುವ ಸಂಬಂಧ ಪ್ರಸ್ತಾವನೆ ಸಲ್ಲಿಸಲಾಗುವುದು. ಇದಲ್ಲದೇ, ರಾಜ್ಯದಲ್ಲಿ 2011-12ನೇ ಸಾಲಿನಿಂದ ಕೇಂದ್ರ ಪುರಸ್ಕೃತ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದೆ. ಈ ಯೋಜನೆಯಡಿ 2011-12ನೇ ಸಾಲಿನಲ್ಲಿ 109 ವೈದ್ಯರು ಮತ್ತು 2018-19ನೇ ಸಾಲಿನಲ್ಲಿ 22 ವೈದ್ಯರನ್ನು ನೇಮಕ ಮಾಡಲಾಗಿದ್ದು, ಒಟ್ಟು 131 ವೈದ್ಯರು ಗುತ್ತಿಗೆ ಮೇಲೆ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಹೇಳಿದರು.