ಬೆಂಗಳೂರು(ಏ.19): ರಾಜಧಾನಿಯಲ್ಲಿ ಕೋವಿಡ್‌-19 ವ್ಯಾಪಕವಾಗಿ ಹರಡುತ್ತಿರುವುದರಿಂದ ಬೆಂಗಳೂರಿಗೆ ಪ್ರತ್ಯೇಕ ಮಾರ್ಗಸೂಚಿಯನ್ನು ಹೊರಡಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ| ಕೆ. ಸುಧಾಕರ್‌ ತಿಳಿಸಿದ್ದಾರೆ.

ಭಾನುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಗರದಲ್ಲಿ ಪರಿಸ್ಥಿತಿ ಕೈಮೀರುತ್ತಿದೆ. ಈ ನಿಟ್ಟಿನಲ್ಲಿ ಕಠಿಣ ಕ್ರಮಗಳನ್ನು ಕೈಗೊಳ್ಳುವುದು ಅನಿವಾರ್ಯವಾಗಿದೆ ಎಂದರು.

‘ಲಾಕ್‌ಡೌನ್‌ ಬಿಟ್ಟು ಬೇರೆ ಪರ್ಯಾಯ ಮಾರ್ಗಗಳನ್ನು ಕಂಡುಕೊಳ್ಳುವಂತೆ ಮುಖ್ಯಮಂತ್ರಿಗಳು ಸೂಚಿಸಿದ್ದಾರೆ. ಕಠಿಣ ನಿಯಮಗಳನ್ನು ಜಾರಿಗೊಳಿಸುವಂತೆ ಹೇಳಿದ್ದಾರೆ. ಸೋಮವಾರ ಬೆಂಗಳೂರಿನ ಜನಪ್ರತಿನಿಧಿಗಳು, ಹಿರಿಯ ಸಚಿವರ ಜೊತೆ ಎಲ್ಲ ಸಾಧಕ ಬಾಧಕಗಳ ಬಗ್ಗೆ ಚರ್ಚಿಸಿ, ಅಭಿಪ್ರಾಯ ಪಡೆದು ತೀರ್ಮಾನಕ್ಕೆ ಬರುತ್ತೇವೆ ಎಂದು ಹೇಳಿದರು.

‘ಬೆಂಗಳೂರಿನಲ್ಲಿ ಸೋಂಕು ಸಮುದಾಯಕ್ಕೆ ಹರಡಿದೆ ಎಂಬ ಮಾಹಿತಿಯನ್ನು ಕೇಂದ್ರ ಸರ್ಕಾರ ನೀಡಿರುವುದರಿಂದ ಬಿಗಿಯಾದ ಕ್ರಮ ಕೈಗೊಳ್ಳದಿದ್ದರೆ ಪರಿಸ್ಥಿತಿ ಕೈ ಮೀರಲಿದೆ’ ಎಂದು ಸಚಿವರು ಆತಂಕ ವ್ಯಕ್ತಪಡಿಸಿದರು.