ತಿಪಟೂರು ತಾಲ್ಲೂಕಿನ ಅಯ್ಯನಬಾವಿ ಗ್ರಾಮದಲ್ಲಿ ಆರು ವರ್ಷದ ಬಾಲಕಿ ಬೀದಿನಾಯಿಗಳ ದಾಳಿಗೆ ಒಳಗಾಗಿ ಮೃತಪಟ್ಟಿದ್ದಾಳೆ. ಮಗುವಿನ ತಲೆ, ಹೊಟ್ಟೆ ಮತ್ತು ಕೈಕಾಲುಗಳಿಗೆ ತೀವ್ರ ಗಾಯಗಳಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ.

ತುಮಕೂರು (ಮೇ.24): ಜಿಲ್ಲೆಯ ತಿಪಟೂರು ತಾಲ್ಲೂಕಿನ ಅಯ್ಯನಬಾವಿ ಗ್ರಾಮದ ಬೋವಿ ಕಾಲೋನಿಯಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. 6 ವರ್ಷದ ಬಾಲಕಿ ನವ್ಯ ಬೀದಿನಾಯಿಗಳ ದಾಳಿಗೆ ಒಳಗಾಗಿ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ.

ಮನೆಯ ಮುಂದೆ ಆಟವಾಡುತ್ತಿದ್ದ ವೇಳೆ ಬೀದಿನಾಯಿಗಳ ಗುಂಪೊಂದು ಮಗುವಿನ ಮೇಲೆ ದಾಳಿ ಮಾಡಿದೆ. ನಾಯಿಗಳು ಮಗುವಿನ ತಲೆಯ ಚರ್ಮವನ್ನು ಕಿತ್ತು, ಹೊಟ್ಟೆ, ಕೈ-ಕಾಲುಗಳನ್ನು ಕಚ್ಚಿ ಗಂಭೀರವಾಗಿ ಗಾಯಗೊಳಿಸಿವೆ. ಮಗುವಿನ ತಂದೆಗೆ ಶ್ರವಣದೋಷವಿರುವ ಕಾರಣ, ದಾಳಿಯ ಸಂದರ್ಭದಲ್ಲಿ ತಕ್ಷಣ ಗಮನಕ್ಕೆ ಬಂದಿಲ್ಲ ಎನ್ನಲಾಗಿದೆ. ಮಗುವಿನ ಚೀರಾಟ ಕೇಳಿ ಸ್ಥಳೀಯರು ಓಡಿಬಂದು ಮಗುವನ್ನು ರಕ್ಷಿಸಿದ್ದಾರೆ.

ತೀವ್ರವಾಗಿ ಗಾಯಗೊಂಡಿದ್ದ ಮಗುವನ್ನು ತಕ್ಷಣ ತಿಪಟೂರು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಗಂಭೀರವಾಗಿ ಗಾಯಗೊಂಡಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಗುವನ್ನು ಬೆಂಗಳೂರಿಗೆ ರವಾನಿಸಲಾಗಿತ್ತು. ಆದಾಗ್ಯೂ, ಚಿಕಿತ್ಸೆ ಫಲಕಾರಿಯಾಗದೇ ಬಾಲಕಿ ಸಾವನ್ನಪ್ಪಿದ್ದಾಳೆ.

ಈ ಘಟನೆಯಿಂದ ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಬೀದಿನಾಯಿಗಳ ಕಾಟದ ಬಗ್ಗೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಂಬಂಧಪಟ್ಟ ಇಲಾಖೆಗಳು ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಲಾಗಿದೆ.