1.5 ವರ್ಷದಿಂದ ವಿಚಾರಣೆಗೆ ನಿತ್ಯಾ ಬರುತ್ತಿಲ್ಲವೇಕೆ?| ರಾಮನಗರ ಕೋರ್ಟ್‌ನಿಂದ ವಿವರಣೆ ಕೇಳಿದ ಹೈಕೋರ್ಟ್| ದೂರುದಾರ ಲೆನಿನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ
ಬೆಂಗಳೂರು[ಫೆ.01]: ಅತ್ಯಾಚಾರ ಆರೋಪ ಎದುರಿಸುತ್ತಿರುವ ಬಿಡದಿ ಧ್ಯಾನಪೀಠದ ನಿತ್ಯಾನಂದ ಸ್ವಾಮೀಜಿ ಸುಮಾರು ಒಂದೂವರೆ ವರ್ಷದಿಂದ ವಿಚಾರಣಾ ನ್ಯಾಯಾಲಯಕ್ಕೆ ಹಾಜರಾಗದ ಬಗ್ಗೆ ರಾಮನಗರದ 3ನೇ ಹೆಚ್ಚುವರಿ ಜಿಲ್ಲಾ ಹಾಗೂ ಸೆಷನ್ಸ್ ನ್ಯಾಯಾಧೀಶರಿಂದ ಹೈಕೋರ್ಟ್ ವಿವರಣೆ ಬಯಸಿದೆ.
ಅತ್ಯಾಚಾರ ಹಾಗೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಪ್ರಕರಣದಲ್ಲಿ ನಿತ್ಯಾನಂದ ಸ್ವಾಮೀಜಿಗೆ 2010ರಲ್ಲಿ ಮಂಜೂರು ಮಾಡಿರುವ ಜಾಮೀನು ರದ್ದುಪಡಿಸುವಂತೆ ಕೋರಿ ದೂರುದಾರ ಲೆನಿನ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ಹಾ ಅವರು ಶುಕ್ರವಾರ ವಿಚಾರಣೆ ನಡೆಸಿದರು.
ಅರ್ಜಿ ಸಂಬಂಧ ನಿತ್ಯಾನಂದ ಸ್ವಾಮೀಜಿಗೆ ಸಿಐಡಿ ತನಿಖಾಧಿಕಾರಿ ಖುದ್ದಾಗಿ 2020ರ ಫೆ.3ರೊಳಗೆ ನೋಟಿಸ್ ಜಾರಿ ಮಾಡಬೇಕು. ಆ ಕುರಿತು ಫೆ.3ಕ್ಕೆ ನ್ಯಾಯಾಲಯಕ್ಕೆ ವರದಿ ಸಲ್ಲಿಸಬೇಕು. ಇದೇ ವೇಳೆ 2018ರ ಜೂನ್ 5ರ ನಂತರ ಪ್ರಕರಣದ ಮೊದಲನೇ ಆರೋಪಿ ನಿತ್ಯಾನಂದ ಸ್ವಾಮೀಜಿ ವಿಚಾರಣೆಗೆ ಏಕೆ ಹಾಜರಾಗಿಲ್ಲ ಎಂಬ ಮಾಹಿತಿ ಮತ್ತು ವಿಚಾರಣಾ ಪ್ರಕ್ರಿಯೆಯ ಸದ್ಯದ ಸ್ಥಿತಿಗತಿ ಕುರಿತು ವರದಿ ಸಲ್ಲಿಸಬೇಕು ಎಂದು ರಾಮನಗರದ 3ನೇ ಹೆಚ್ಚುವರಿ ಜಿಲ್ಲಾ ಹಾಗೂ ಸೆಷನ್ಸ್ ನ್ಯಾಯಾಧೀಶರಿಗೆ ಹೈಕೋರ್ಟ್ ಸೂಚಿಸಿತು. ಬಳಿಕ ಅರ್ಜಿ ವಿಚಾರಣೆಯನ್ನು ಫೆ.3ಕ್ಕೆ ಮುಂದೂಡಿತು.
ರೇಪ್ ಕೇಸ್: ತೀರ್ಪು ಕಾಯ್ದಿರಿಸಿದ ಕೋರ್ಟ್| ನ್ಯಾಯಾಲಯ ಬದಲಿಸಲು ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ಪೂರ್ಣ
ಇದಲ್ಲದೆ, ನಿತ್ಯಾನಂದ ಸ್ವಾಮೀಜಿ ವಿರುದ್ಧದ ಅತ್ಯಾಚಾರ ಹಾಗೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪ ಕುರಿತ ವಿಚಾರಣೆಯನ್ನು ರಾಮನಗರದ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಿಂದ ಮತ್ತೊಂದು ನ್ಯಾಯಾಲಯಕ್ಕೆ ವರ್ಗಾವಣೆ ಮಾಡುವಂತೆ ಕೋರಿ ಲೆನಿನ್ ಸಲ್ಲಿಸಿದ್ದ ಅರ್ಜಿಯ ತೀರ್ಪನ್ನು ಹೈಕೋರ್ಟ್ ಕಾಯ್ದಿರಿಸಿದೆ.
ಅರ್ಜಿ ಸಂಬಂಧ ಲೆನಿನ್ ಪರ ವಕೀಲರ ವಾದ, ನಿತ್ಯಾನಂದ ಸ್ವಾಮೀಜಿ ಹಾಗೂ ಇತರೆ ಆರೋಪಿಗಳ ಪರ ವಕೀಲರ ಪ್ರತಿವಾದ ಆಲಿಸಿ ವಿಚಾರಣೆ ಪೂರ್ಣಗೊಳಿಸಿದ ನ್ಯಾಯಮೂರ್ತಿ ಬಿ.ಎ.ಪಾಟೀಲ್ ಅವರಿದ್ದ ನ್ಯಾಯಪೀಠ ತೀರ್ಪು ಕಾಯ್ದಿರಿಸಿತು.
ಲೆನಿನ್ ಪರ ವಕೀಲರು, ಆರೋಪಿ ನಿತ್ಯಾನಂದ ಸ್ವಾಮೀಜಿ ಸತತವಾಗಿ ವಿಚಾರಣೆಗೆ ಗೈರಾಗುತ್ತಿದ್ದಾರೆ. ಮಾನ್ಯತೆಯಿಲ್ಲದ ಪಾರ್ಸ್‌ಪೋರ್ಟ್ ಬಳಸಿ ವಿದೇಶಕ್ಕೆ ಪ್ರಯಾಣಿಸಿದ್ದಾರೆ. ಅವರು ಸದ್ಯ ಎಲ್ಲಿದ್ದಾರೋ ಗೊತ್ತಿಲ್ಲ. ಈ ಎಲ್ಲಾ ವಿಚಾರವೂ ಪ್ರಾಸಿಕ್ಯೂಷನ್ ಹಾಗೂ ಸರ್ಕಾರಿ ಅಭಿಯೋಜಕರಿಗೆ ತಿಳಿದಿದ್ದರೂ ಅದರ ವಿರುದ್ಧ ಧ್ವನಿ ಎತ್ತುತ್ತಿಲ್ಲ ಎಂದರು.
ಸ್ವಾಮೀಜಿ ಪರ ವಕೀಲರು, ಸ್ವಾಮೀಜಿಯು ವಿಚಾರಣಾ ನ್ಯಾಯಾಲಯದ ವಿಚಾರಣೆಗೆ ತಪ್ಪದೇ ಹಾಜರಾಗಿದ್ದರು ಹಾಗೂ ಸಹಕಾರ ನೀಡಿದ್ದರು. ಆದರೆ, ದೂರುದಾರ ಲೆನಿನ್ ವಿಚಾರಣೆಗೆ ಸರಿಯಾಗಿ ಹಾಜರಾಗುತ್ತಿರಲಿಲ್ಲ. ಅನಾರೋಗ್ಯವಿರುವುದಾಗಿ ನಕಲಿ ವೈದ್ಯಕೀಯ ಪ್ರಮಾಣಪತ್ರ ಸಲ್ಲಿಸಿ ವಿಚಾರಣೆಗೆ ಗೈರಾಗಿದ್ದರು ಎಂದು ದೂರಿದರು.
ರಾಜ್ಯ ಹೆಚ್ಚುವರಿ ಸರ್ಕಾರಿ ಅಭಿಯೋಜಕರು, ವಿಚಾರಣಾ ನ್ಯಾಯಾಲಯದಲ್ಲಿ ಸೂಕ್ತ ಹಾಗೂ ನಿಯಮಿತವಾಗಿ ವಿಚಾರಣೆ ನಡೆಸಲು ಪ್ರಾಸಿಕ್ಯೂಷನ್ ಸಿದ್ಧವಿದೆ ಎಂದು ತಿಳಿಸಿದರು.
