Yediyurappa POCSO case update :ತಮ್ಮ ಮೇಲಿನ ಪೋಕ್ಸೋ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಪೂರ್ಣಗೊಳಿಸಿರುವ ಹೈಕೋರ್ಟ್, ತನ್ನ ತೀರ್ಪನ್ನು ಕಾಯ್ದಿರಿಸಿದೆ. ವಿಚಾರಣೆ ವೇಳೆ ನಡೆದಿದ್ದೇನು?
ಬೆಂಗಳೂರು (ಅ.24): ತಮ್ಮ ವಿರುದ್ಧ ಪೋಕ್ಸೋ ಕಾಯ್ದೆಯಡಿ ದಾಖಲಾಗಿರುವ ಕ್ರಿಮಿನಲ್ ಪ್ರಕರಣವನ್ನು ವಿಚಾರಣೆಗೆ ಪರಿಗಣಿಸಿದ ಅಧೀನ ನ್ಯಾಯಾಲಯದ ಕ್ರಮ ರದ್ದು ಕೋರಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಪ್ರಕರಣದ ಸಹ ಆರೋಪಿಗಳು ಸಲ್ಲಿಸಿರುವ ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್ ತೀರ್ಪು ಕಾಯ್ದಿರಿಸಿದೆ.
ಅರ್ಜಿದಾರರ ಪರ ವಕೀಲರ ವಾದ ಮತ್ತು ಸಿಐಡಿ ತನಿಖಾಧಿಕಾರಿ ಪರ ವಿಶೇಷ ಅಭಿಯೋಜಕರ ಪ್ರತಿವಾದ ಆಲಿಸಿ ವಿಚಾರಣೆ ಪೂರ್ಣಗೊಳಿಸಿದ ನ್ಯಾಯಮೂರ್ತಿ ಎಂ.ಐ.ಅರುಣ್ ಅವರ ಪೀಠ ತೀರ್ಪು ಕಾಯ್ದಿರಿಸಿತು.
ಯಡಿಯೂರಪ್ಪ ಪರ ವಕೀಲರ ವಾದವೇನು?
ಯಡಿಯೂರಪ್ಪ ಪರ ವಕೀಲರು, ಸಂತ್ರಸ್ತೆಯ ಹೇಳಿಕೆಯನ್ನು ಮಾತ್ರ ಪರಿಗಣಿಸಿ ಅಧೀನ ನ್ಯಾಯಾಲಯವು ಪ್ರಕರಣವನ್ನು ವಿಚಾರಣೆಗೆ ಸ್ವೀಕರಿಸಿದೆ. ಈ ಸಂದರ್ಭದಲ್ಲಿ ವಿಚಾರಣಾಧೀನ ನ್ಯಾಯಾಲಯದ ನ್ಯಾಯಾಧೀಶರು ಸೂಕ್ತವಾಗಿ ವಿವೇಚನೆ ಬಳಸಿಲ್ಲ ಎಂದು ಆಕ್ಷೇಪಿಸಿದರು.
ಸರ್ಜಾರಿ ಅಭಿಯೋಜಕರ ವಾದವೇನು?
ವಿಶೇಷ ಸರ್ಕಾರಿ ಅಭಿಯೋಜಕರು, ಸಂತ್ರಸ್ತೆಯ ತಾಯಿ ಮತ್ತು ಯಡಿಯೂರಪ್ಪ ನಡುವಿನ ಆಡಿಯೊ ರೆಕಾರ್ಡಿಂಗ್ ನಾಶಪಡಿಸಲಾಗಿದೆ. ಸಂತ್ರಸ್ತೆಯ ತಾಯಿಯ ಮೊಬೈಲ್ ಕಸಿದು ಸಹ ಆರೋಪಿ ಅರುಣ್ ಎಂಬವರು ಜಾಲತಾಣದಲ್ಲಿ ಅಪ್ಲೋಡ್ ಮಾಡಲಾಗಿದ್ದ ಆಡಿಯೊ ರೆಕಾರ್ಡಿಂಗ್ ಡಿಲೀಟ್ ಮಾಡಿಸಿದ್ದಾರೆ. ಆದರೆ, ಸಂತ್ರಸ್ತೆ ಮೊಬೈಲ್‌ನಲ್ಲಿ ಇರುವ ಅಸಲಿ ಆಡಿಯೊದಲ್ಲಿನ ಧ್ವನಿ ಯಡಿಯೂರಪ್ಪರದ್ದಾಗಿದೆ ಎಂದು ಎಫ್‌ಎಸ್‌ಎಲ್ ವರದಿ ಖಚಿತಪಡಿಸಿದೆ, ಆದ್ದರಿಂದ ಅರ್ಜಿ ವಜಾಗೊಳಿಸಬೇಕು ಎಂದು ಕೋರಿದರು.
