ಯಲ್ಲಾಪುರದಲ್ಲಿ ನಡೆದ ರಂಜಿತಾ ಬನಸೋಡೆ ಅವರ ಭೀಕರ ಕೊಲೆಯನ್ನು ಶಾಸಕ ಶಿವರಾಮ ಹೆಬ್ಬಾರ್ ತೀವ್ರವಾಗಿ ಖಂಡಿಸಿದ್ದಾರೆ. ಇದೊಂದು ಅಮಾನವೀಯ ಕೃತ್ಯವೆಂದು ಬಣ್ಣಿಸಿದ ಅವರು, ಪೊಲೀಸ್ ಉನ್ನತಾಧಿಕಾರಿಗಳೊಂದಿಗೆ ಸಭೆ ನಡೆಸಿ ಆರೋಪಿಯನ್ನು ಶೀಘ್ರವೇ ಬಂಧಿಸಿ ಕಠಿಣ ಶಿಕ್ಷೆ ವಿಧಿಸುವಂತೆ ಖಡಕ್ ಸೂಚನೆ ನೀಡಿದ್ದಾರೆ.

ಕಾರವಾರ (ಜ.3): ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ನಡೆದ ರಂಜಿತಾ ಬನಸೋಡೆ ಅವರ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯ ಶಾಸಕ ಶಿವರಾಮ ಹೆಬ್ಬಾರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಘಟನೆಯನ್ನು ಅತ್ಯಂತ ಅಮಾನವೀಯ ಕೃತ್ಯ, ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಒತ್ತಾಯಿಸಿದರು.

ನಾಗರಿಕ ಸಮಾಜ ತಲೆತಗ್ಗಿಸುವಂತಹ ಘಟನೆ

ಯಲ್ಲಾಪುರದ ಕಾಳಮ್ಮ ನಗರದ ನಿವಾಸಿ ರಂಜಿತಾ ಬನಸೋಡೆ ಅವರ ಕೊಲೆಯ ಬಗ್ಗೆ ಪ್ರತಿಕ್ರಿಯಿಸಿದ ಶಿವರಾಮ ಹೆಬ್ಬಾರ್, 'ಒಬ್ಬ ಅಮಾಯಕ ಹೆಣ್ಣುಮಗಳ ಭೀಕರ ಹತ್ಯೆ ನಡೆದಿರುವುದು ಅತ್ಯಂತ ಖಂಡನೀಯ. ಇದು ನಾಗರಿಕ ಸಮಾಜವೇ ತಲೆತಗ್ಗಿಸುವಂತಹ ಅಮಾನವೀಯ ಕೃತ್ಯವಾಗಿದೆ. ಯಲ್ಲಾಪುರದ ಇತಿಹಾಸದಲ್ಲೇ ಇಂತಹ ಕ್ರೂರ ಘಟನೆಯನ್ನು ನಾವೆಂದು ಕಂಡಿರಲಿಲ್ಲ. ಇಂತಹ ಕೃತ್ಯಗಳು ಶಾಂತಿಪ್ರಿಯ ಯಲ್ಲಾಪುರಕ್ಕೆ ಕಪ್ಪುಚುಕ್ಕೆಯಾಗಿದೆ' ಎಂದು ವಿಷಾದ ವ್ಯಕ್ತಪಡಿಸಿದರು.

ಪೊಲೀಸ್ ಉನ್ನತಾಧಿಕಾರಿಗಳ ಜೊತೆ ತುರ್ತು ಸಭೆ

ಘಟನೆ ನಡೆದ ಬೆನ್ನಲ್ಲೇ ಅಲರ್ಟ್ ಆಗಿರುವ ಶಾಸಕರು, ಈಗಾಗಲೇ ಪೊಲೀಸ್ ಉನ್ನತಾಧಿಕಾರಿಗಳೊಂದಿಗೆ ಸಭೆ ನಡೆಸಿ ಪರಿಸ್ಥಿತಿಯ ಪರಾಮರ್ಶೆ ನಡೆಸಿದ್ದಾರೆ. ಘಟನೆಯ ಸಂಪೂರ್ಣ ಮಾಹಿತಿಯನ್ನು ಪಡೆದಿರುವ ಅವರು, ತನಿಖೆಯನ್ನು ಚುರುಕುಗೊಳಿಸುವಂತೆ ಮತ್ತು ಪಟ್ಟಣದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ನಿರ್ದಾಕ್ಷಿಣ್ಯ ಕ್ರಮಕ್ಕೆ ಶಾಸಕರ ಖಡಕ್ ಸೂಚನೆ

ಕೊಲೆ ಮಾಡಿ ಪರಾರಿಯಾಗಿರುವ ಆರೋಪಿಯನ್ನು ಕೂಡಲೇ ಪತ್ತೆ ಹಚ್ಚಬೇಕು ಎಂದು ಹೆಬ್ಬಾರ್ ಆಗ್ರಹಿಸಿದ್ದಾರೆ. ಆರೋಪಿಯನ್ನು ಶೀಘ್ರದಲ್ಲಿ ಬಂಧಿಸಿ, ಕಾನೂನಿನ ಚೌಕಟ್ಟಿನಲ್ಲಿ ಅತ್ಯಂತ ಕಠಿಣ ಶಿಕ್ಷೆ ವಿಧಿಸಬೇಕು. ಇಂತಹ ಕ್ರೂರ ಕೃತ್ಯ ಎಸಗುವವರ ವಿರುದ್ಧ ಪೊಲೀಸರು ಯಾವುದೇ ಮುಲಾಜಿಲ್ಲದೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು. ಸಂತ್ರಸ್ತೆಯ ಕುಟುಂಬಕ್ಕೆ ನ್ಯಾಯ ಸಿಗುವವರೆಗೂ ನಾವು ವಿಶ್ರಮಿಸುವುದಿಲ್ಲ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.