ದೀಪಾವಳಿ ಹಬ್ಬದ ಸಂದರ್ಭದಲ್ಲಿ ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

ಬೆಂಗಳೂರು: ದೀಪಾವಳಿ ಸಂಭ್ರಮದಲ್ಲಿರುವ ರಾಜ್ಯದ ಜನತೆಯ ಖುಷಿಗೆ ವರುಣ ತಣ್ಣೀರು ಎರಚಲಿದ್ದಾನೆ. ಕರ್ನಾಟಕದ ಹಲವೆಡೆಗಳಲ್ಲಿ ಇಂದು ಭಾರೀ ಮಳೆಯ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ವಿಶೇಷವಾಗಿ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯ ತೀವ್ರತೆ ಹೆಚ್ಚುವ ನಿರೀಕ್ಷೆ ಇದೆ. ಹವಾಮಾನ ಇಲಾಖೆ ಬಿಡುಗಡೆ ಮಾಡಿದ ಮುನ್ಸೂಚನೆಯ ಪ್ರಕಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ರಾಮನಗರ, ಕೋಲಾರ, ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದು ದಿನಪೂರ್ತಿ ಮಧ್ಯಮದಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ

ಗಾಳಿಯು ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದಲ್ಲಿ ಬೀಸುವ ನಿರೀಕ್ಷೆಯಿದ್ದು, ಈ ಹಿನ್ನೆಲೆಯಲ್ಲಿ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಕರಾವಳಿ ಭಾಗದಲ್ಲಿ ಅಲೆಗಳ ಎತ್ತರ ಹೆಚ್ಚುವ ಸಾಧ್ಯತೆ ಇರುವುದರಿಂದ ಕಡಲತೀರ ಪ್ರದೇಶಗಳಲ್ಲಿ ಜನರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

ಮಳೆಯ ಪ್ರಮಾಣ ಇನ್ನಷ್ಟು ಹೆಚ್ಚುವ ಸಾಧ್ಯತೆ 

ನಗರಗಳಲ್ಲಿ ಆಕಸ್ಮಿಕ ಮಳೆಯ ಕಾರಣದಿಂದ ರಸ್ತೆಗಳಲ್ಲಿ ನೀರು ನಿಂತು ಸಂಚಾರ ದಟ್ಟಣೆ ಉಂಟಾಗುವ ಸಾಧ್ಯತೆ ಇದ್ದು, ನಾಗರಿಕರು ಪ್ರಯಾಣವನ್ನು ಯೋಜಿತವಾಗಿ ಕೈಗೊಳ್ಳುವಂತೆ ಸಲಹೆ ನೀಡಲಾಗಿದೆ. ಗ್ರಾಮೀಣ ಭಾಗಗಳಲ್ಲಿ ರೈತರು ಹಾಗೂ ನಾಗರಿಕರು ತಮ್ಮ ಬೆಳೆಗಳು ಮತ್ತು ಆಸ್ತಿಪಾಸ್ತಿಗಳ ರಕ್ಷಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಹವಾಮಾನ ಇಲಾಖೆ ಸೂಚಿಸಿದೆ. ಹವಾಮಾನ ಇಲಾಖೆ ಮುಂದಿನ 24 ಗಂಟೆಗಳ ಒಳಗಾಗಿ ಮಳೆಯ ಪ್ರಮಾಣ ಇನ್ನಷ್ಟು ಹೆಚ್ಚುವ ಸಾಧ್ಯತೆ ಇದೆ ಎಂದು ಎಚ್ಚರಿಸಿದೆ.