ಯೋಗೇಶ್ ಗೌಡ ಕೊಲೆ ಪ್ರಕರಣದ ಪ್ರಮುಖ ಆರೋಪಿ, ಮಾಜಿ ಸಚಿವ ವಿನಯ್ ಕುಲಕರ್ಣಿ, ತಮ್ಮ ಜಾಮೀನು ಷರತ್ತು ಸಡಿಲಿಸಲು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಸಾಕ್ಷಿ ನಾಶ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಿಸಲಾಗಿರುವ ಧಾರವಾಡ ಜಿಲ್ಲಾ ಪ್ರವೇಶ ನಿರ್ಬಂಧವನ್ನು ತೆರವುಗೊಳಿಸುವಂತೆ ಅವರು ಮನವಿ ಮಾಡಿದ್ದಾರೆ.
ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯತ್ ಬಿಜೆಪಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಚಿವ ವಿನಯ್ ಕುಲಕರ್ಣಿ, ತಮ್ಮ ಜಾಮೀನು ಷರತ್ತುಗಳನ್ನು ಸಡಿಲಿಸುವಂತೆ ಕೋರಿ ಮತ್ತೆ ನ್ಯಾಯಾಲಯದ ಬಾಗಿಲು ತಟ್ಟಿದ್ದಾರೆ. ಸಾಕ್ಷಿ ನಾಶ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಿಸಲಾಗಿರುವ ಧಾರವಾಡ ಪ್ರವೇಶ ನಿರ್ಬಂಧವನ್ನು ತೆರವುಗೊಳಿಸುವಂತೆ ಕೋರಿ ಅವರು ಜನಪ್ರತಿನಿಧಿಗಳ ವಿಶೇಷ ಮ್ಯಾಜಿಸ್ಟ್ರೇಟ್ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿಗೆ ಈಗಾಗಲೇ ಹೈಕೋರ್ಟ್‌ನಿಂದ ಜಾಮೀನು ಲಭಿಸಿದೆ. ಆದರೆ, ಈ ಪ್ರಕರಣದ ಪ್ರಮುಖ ಸಾಕ್ಷಿಗಳಿಗೆ ಬೆದರಿಕೆ ಹಾಕಿದ ಮತ್ತು ಸಾಕ್ಷಿ ನಾಶಪಡಿಸಲು ಯತ್ನಿಸಿದ ಆರೋಪದ ಮೇಲೆ (ಐಪಿಸಿ ಸೆಕ್ಷನ್ 195A ಅಡಿಯಲ್ಲಿ) ಅವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಸಾಕ್ಷಿ ನಾಶ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣಾ ನ್ಯಾಯಾಲಯವು ಜಾಮೀನು ನೀಡುವ ವೇಳೆ, "ಧಾರವಾಡ ಜಿಲ್ಲೆಗೆ ಪ್ರವೇಶಿಸಬಾರದು" ಎಂಬ ಕಠಿಣ ಷರತ್ತನ್ನು ವಿಧಿಸಿತ್ತು.
ಷರತ್ತು ಸಡಿಲಿಕೆಗೆ ಮನವಿ
ಇದೀಗ ಧಾರವಾಡ ಜಿಲ್ಲೆಗೆ ಪ್ರವೇಶಿಸಲು ವಿಧಿಸಲಾಗಿರುವ ಈ ಕಠಿಣ ಷರತ್ತಿನಿಂದ ತಮಗೆ ವಿನಾಯಿತಿ ನೀಡಬೇಕು ಮತ್ತು ಧಾರವಾಡ ಪ್ರವೇಶಕ್ಕೆ ಅನುಮತಿ ನೀಡಬೇಕು ಎಂದು ಕೋರಿ ವಿನಯ್ ಕುಲಕರ್ಣಿ ಅವರು ಬೆಂಗಳೂರಿನ ಜನಪ್ರತಿನಿಧಿಗಳ ಮ್ಯಾಜಿಸ್ಟ್ರೇಟ್ ಕೋರ್ಟ್‌ಗೆ ಮನವಿ ಸಲ್ಲಿಸಿದ್ದಾರೆ. ತಮ್ಮ ಕ್ಷೇತ್ರ ಮತ್ತು ಜಿಲ್ಲೆಯಲ್ಲಿ ಜನಸೇವೆ ಹಾಗೂ ರಾಜಕೀಯ ಚಟುವಟಿಕೆಗಳಲ್ಲಿ ಭಾಗವಹಿಸಲು ಈ ಷರತ್ತು ಅಡ್ಡಿಯಾಗುತ್ತಿದ್ದು, ಅದನ್ನು ಸಡಿಲಗೊಳಿಸಬೇಕು ಎಂದು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ ಎನ್ನಲಾಗಿದೆ. ಈ ಅರ್ಜಿಯ ವಿಚಾರಣೆಯನ್ನು ಕೈಗೆತ್ತಿಕೊಳ್ಳಲಿರುವ ನ್ಯಾಯಾಲಯವು, ಸಿಬಿಐ ಹಾಗೂ ಪ್ರಾಸಿಕ್ಯೂಷನ್ ಆಕ್ಷೇಪಣೆಗಳನ್ನು ಆಲಿಸಿದ ನಂತರ ತೀರ್ಪು ಪ್ರಕಟಿಸುವ ನಿರೀಕ್ಷೆಯಿದೆ.
ಘಟನೆ ಹಿನ್ನೆಲೆ:
ಬರೋಬ್ಬರಿ ಹತ್ತು ವರ್ಷಗಳ ಹಿಂದೆ ನಡೆದಿದ್ದ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಹೈಕೋರ್ಟ್ ದ್ವಿಸದಸ್ಯ ಪೀಠ ಜುಲೈ 31ರಂದು ನೀಡಿರುವ ಮಹತ್ವದ ಆದೇಶ ಜೀವಾವಧಿ ಶಿಕ್ಷೆಗೆ ಒಳಗಾಗಿ ಜೈಲು ಪಾಲಾಗಿದ್ದ ಧಾರವಾಡ ಗ್ರಾಮೀಣ ಶಾಸಕ ವಿನಯ ಕುಲಕರ್ಣಿ ಅವರಿಗೆ ದೊಡ್ಡ ನಿರಾಳತೆ ತಂದುಕೊಟ್ಟಿತ್ತು. ಈ ಕೊಲೆ ಪ್ರಕರಣದಲ್ಲಿ ವಿನಯ ಕುಲಕರ್ಣಿ ಸೇರಿ 17 ಮಂದಿಯನ್ನು ಅಪರಾಧಿ ಎಂದಿದ್ದ ನ್ಯಾಯಾಲಯ ಕಳೆದ ಏ.17ರಂದು ಜೀವಾವಧಿ ಶಿಕ್ಷೆ ವಿಧಿಸಿ ಜನಪ್ರತಿನಿಧಿಗಳ ಸೆಷೆನ್ಸ್ ನ್ಯಾಯಾಲಯ ಆದೇಶ ಹೊರಡಿಸಿತ್ತು. ಹೀಗಾಗಿ, ವಿನಯ ಕುಲಕರ್ಣಿ ಅವರಿಗೆ ಶಾಸಕ ಸ್ಥಾನ ಹೋಗುವುದಲ್ಲದೇ ಜೀವನಪೂರ್ತಿ ಜೈಲು ಪಾಲಾಗುವ ದೊಡ್ಡ ಕಂಟಕ ಎದುರಾಗಿತ್ತು. ಸುದೀರ್ಘ ಕಾನೂನು ಹೋರಾಟದ ನಂತರ ಹೈಕೋರ್ಟ್ ಅವರಿಗೆ ಜಾಮೀನು ಮಂಜೂರು ಮಾಡಿದೆ.
2016ರ ಜೂನ್ 15ರಂದು ಧಾರವಾಡದ ಸಪ್ತಾಪೂರದ ಅವರದ್ದೇಯಾದ ಜಿಮ್‌ನಲ್ಲಿ ಯೋಗೀಶಗೌಡನ ಬರ್ಬರ ಹತ್ಯೆಯಾಗಿತ್ತು. ಆರಂಭದಲ್ಲಿ ಸ್ಥಳೀಯ ಪೊಲೀಸರಿಂದ ತನಿಖೆ ನಡೆದಿತ್ತು. ನಂತರ 2019ರಲ್ಲಿ ಪ್ರಕರಣವನ್ನು ಸಿಬಿಐಗೆ ವಹಿಸಲಾಯಿತು. ಈ ಪ್ರಕರಣದಲ್ಲಿ ವಿನಯ ಕುಲಕರ್ಣಿ 2020ರಲ್ಲಿ ಬಂಧನಕ್ಕೆ ಒಳಗಾದರು. ತದನಂತರ 2021ರಲ್ಲಿ ಜಾಮೀನು ಪಡೆದಿದ್ದರು. ಆದರೆ, ಸಾಕ್ಷಿಗಳ ಮೇಲೆ ಪ್ರಭಾವ ಬೀರಿದ ಆರೋಪದ ಮೇಲೆ ಸುಪ್ರಿಂ ಕೋರ್ಟ್ ಇವರ ಜಾಮೀನು ರದ್ದುಗೊಳಿಸಿತ್ತು. ಎರಡು ಕಡೆಯಿಂದ ವಾದ-ಪ್ರತಿವಾದ ಹಾಗೂ ಸಾಕ್ಷಿಗಳ ವಿಚಾರಣೆ ನಡೆದು ಕಳೆದ ಏ. 17ರಂದು ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಿ ಜಿಲ್ಲಾ ಸೆಷೆನ್ಸ್ ನ್ಯಾಯಾಲಯ ಆದೇಶ ನೀಡಿತ್ತು.


