ನೀಟ್ ಪರೀಕ್ಷಾ ಅಕ್ರಮ ಮತ್ತು ವಿದ್ಯಾರ್ಥಿಗಳ ಆತ್ಮ*ಹತ್ಯೆ ಖಂಡಿಸಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜೀನಾಮೆಗೆ ಆಗ್ರಹಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ಬೆಂಗಳೂರಿನ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ತಡೆದು, ನೂರಾರು ಕಾರ್ಯಕರ್ತರನ್ನು ವಶಕ್ಕೆ ಪಡೆದು ನಂತರ ಬಿಡುಗಡೆ ಮಾಡಿದರು.

ಬೆಂಗಳೂರು : ನೀಟ್ ಪರೀಕ್ಷಾ ಅಕ್ರಮ ಹಾಗೂ ವಿದ್ಯಾರ್ಥಿಗಳ ಸರಣಿ ಆತ್ಮ*ಹತ್ಯೆ ಖಂಡಿಸಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ರಾಜೀನಾಮೆಗೆ ಆಗ್ರಹಿಸಿ ಭಾನುವಾರ ಮಲ್ಲೇಶ್ವರದ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ನೂರಾರು ರಾಜ್ಯ ಯುವ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದು ಬಿಡುಗಡೆಗೊಳಿಸಿದರು.

ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಸುಖಾಸುಮ್ಮನೆ ಆರೋಪ ಮಾಡುವ ಬಿಜೆಪಿ, ನೀಟ್ ಪರೀಕ್ಷೆಯ ಅಕ್ರಮವನ್ನು ತಡೆಗಟ್ಟಲು ಸೂಕ್ತ ಹಾಗೂ ಸಮರ್ಪಕ ಕ್ರಮ ಕೈಗೊಳ್ಳುವಲ್ಲಿ ಸಂಪೂರ್ಣ ವಿಫಲವಾಗಿದೆ. ನೀಟ್‌ ಪರೀಕ್ಷೆ ವಿಚಾರದಲ್ಲಿ ಇನ್ನೂ ಗೊಂದಲಗಳು ಮುಂದುವರಿಸುತ್ತಿದೆ. ನೀಟ್ ಪರೀಕ್ಷಾ ಅಕ್ರಮ ಹಾಗೂ ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆ ಮತ್ತು ದೆಹಲಿಯ ಪ್ರತಿಭಟನಕಾರರ ಮೇಲೆ ಲಾಠಿ ಪ್ರಹಾರಕ್ಕೆ ಹೊಣೆ ಹೊತ್ತು ಕೇಂದ್ರ ಸಚಿವ ಅಮಿತ್‌ ಶಾ ರಾಜೀನಾಮೆ ನೀಡಬೇಕು ಎಂದು ಯುವ ಕಾಂಗ್ರೆಸ್‌ ರಾಜ್ಯಾಧ್ಯಕ್ಷ ಎಚ್‌.ಎಸ್‌. ಮಂಜುನಾಥ್‌ ಗೌಡ ನೇತೃತ್ವದಲ್ಲಿ ರಾಜ್ಯ ಯುವ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ವಿದ್ಯಾರ್ಥಿಗಳು ಬಿಜೆಪಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ಮುಂಜಾಗ್ರತಾ ಕ್ರಮವಾಗಿ ಬ್ಯಾರಿಕೇಡ್‌

ಪ್ರತಿಭಟನೆಯ ಹಿನ್ನೆಲೆಯಲ್ಲಿ ಬಿಜೆಪಿ ಕಚೇರಿ ಮುಂಭಾಗದಲ್ಲಿ ಪೊಲೀಸರು ಮುಂಜಾಗ್ರತಾ ಕ್ರಮವಾಗಿ ಬ್ಯಾರಿಕೇಡ್‌ ಅಳವಡಿಸಿದ್ದರು. ಆದರೆ, ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಕಾರ್ಯಕರ್ತರು ಹಾಗೂ ವಿದ್ಯಾರ್ಥಿಗಳು, ಬ್ಯಾರಿಗೇಡ್‌ಗಳನ್ನು ತಳ್ಳಿದರಲ್ಲದೆ, ಅವುಗಳನ್ನು ದಾಟಿ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಪ್ರಯತ್ನಿಸಿದರು. ಈ ವೇಳೆ ಪೊಲೀಸರು ಕಾರ್ಯಕರ್ತರನ್ನು ತಡೆದರು.

ಇದರಿಂದ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಕಾರರು ರಸ್ತೆಯಲ್ಲಿಯೇ ಕುಳಿತು-ಮಲಗಿ ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು. ಜತೆಗೆ, ‘ವಿದ್ಯಾರ್ಥಿಗಳಿಗೆ ಅನ್ಯಾಯ; ಶಾಗೆ ಶಿಕ್ಷೆ ಕಡ್ಡಾಯ’. ‘ವಿದ್ಯಾರ್ಥಿಗಳ ಆತ್ಮಹತ್ಯೆಗೆ ಉತ್ತರ ಕೊಡಿ; ಇಲ್ಲವೇ ಸ್ಥಾನ ಬಿಟ್ಟು ಹೊರಗೆ ಹೋಗಿ’ ಎಂದು ಬರೆದಿದ್ದ ಭಿತ್ತಿ ಪತ್ರಗಳನ್ನು ಹಿಡಿದು ಘೋಷಣೆ ಕೂಗಿದರು.

ನಂತರ ಉದ್ವಿಗ್ನ ಪರಿಸ್ಥಿತಿ ಸೃಷ್ಟಿ

ನಂತರ ಉದ್ವಿಗ್ನ ಪರಿಸ್ಥಿತಿ ಸೃಷ್ಟಿಯಾಗುತ್ತಿದ್ದಂತೆ ಪೊಲೀಸರು, ಲಘು ಲಾಠಿ ಪ್ರಹಾರ ನಡೆಸಿ ಪ್ರತಿಭಟನಾಕಾರರ ಗುಂಪು ಚುದುರಿಸಿದರು. ಆಗ ಪೊಲೀಸರು ಮತ್ತು ಪ್ರತಿಭಟನಕಾರರ ಮಧ್ಯೆ ವಾಗ್ವಾದ ನಡೆಯಿತು. ಬಿಗುವಿನ ವಾತಾವರಣ ನಿರ್ಮಾಣವಾದಂತೆಯೇ ಪೊಲೀಸರು, ನೆರೆದಿದ್ದ ನೂರಾರು ಯುವ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ವಿದ್ಯಾರ್ಥಿಗಳನ್ನು ಬಂಧಿಸಿ ವಾಹನದಲ್ಲಿ ಕರೆದೊಯ್ದು ಬಳಿಕ ಬಿಡುಗಡೆಗೊಳಿಸಿದರು.

ಈ ವೇಳೆ ಮಾತನಾಡಿದ ಮಂಜುನಾಥ್ ಗೌಡ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುವುದು ಪ್ರತಿಯೊಬ್ಬರ ಸಂವಿಧಾನಬದ್ಧ ಹಕ್ಕು. ವಿದ್ಯಾರ್ಥಿಗಳ ಭವಿಷ್ಯ ಮತ್ತು ನ್ಯಾಯಕ್ಕಾಗಿ ಬೀದಿಗಿಳಿದ ಯುವ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಪೊಲೀಸರು ನಡೆಸಿರುವ ಲಾಠಿ ಪ್ರಹಾರ ಅತ್ಯಂತ ಖಂಡನೀಯ ಹಾಗೂ ಹೇಡಿತನದ ಕೃತ್ಯ ಎಂದು ಕಿಡಿಕಾರಿದರು.

ಪ್ರತಿಭಟನೆಯಲ್ಲಿ ಭಾರತೀಯ ಯುವ ಕಾಂಗ್ರೆಸ್ ರಾಷ್ಟ್ರೀಯ ಕಾರ್ಯದರ್ಶಿ ತಾರೀಖ್ ಬಾಗವಾನ್ ಸೇರಿದಂತೆ ಯುವ ಕಾಂಗ್ರೆಸ್‌ನ ವಿವಿಧ ಪದಾಧಿಕಾರಿಗಳು ಹಾಗೂ ಹಲವಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.