Asianet Suvarna News Asianet Suvarna News

ಕಾಂಗ್ರೆಸ್ ಸರ್ಕಾರ ಬೀಳಿಸಲು ಸಿಂಗಾಪುರದಲ್ಲಿ ಸಂಚು ರೂಪಿಸಲಾಗುತ್ತಿದೆ: ಡಿಕೆಶಿ

ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಬೀಳಿಸಲು ಸಿಂಗಾಪುರದಲ್ಲಿ ಷಡ್ಯಂತ್ರ ನಡೆಸಲಾಗುತ್ತಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸೋಮವಾರ ಗಂಭೀರ ಆರೋಪ ಮಾಡಿದ್ದಾರೆ.
 

ಬೆಂಗಳೂರು (ಜು.24): ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಬೀಳಿಸಲು ಸಿಂಗಾಪುರದಲ್ಲಿ ಷಡ್ಯಂತ್ರ ನಡೆಸಲಾಗುತ್ತಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸೋಮವಾರ ಗಂಭೀರ ಆರೋಪ ಮಾಡಿದ್ದಾರೆ. ಈ ಬಗ್ಗೆ ಡಿಕೆ ಶಿವಕುಮಾರ್, ಸಿಂಗಾಪುರದಲ್ಲಿ ಕುಳಿತು ಬಹುಮತದ ಸರ್ಕಾರ ಬೀಳಿಸಲು ಯೋಜನೆ ರೂಪಿಸಲಾಗುತ್ತಿದೆ. ನನಗೆ ಸಿಕ್ಕಿರುವ ಮಾಹಿತಿಗಳ ಪ್ರಕಾರ ಅವರು ಸಿಂಗಾಪುರದಿಂದ ಕಾರ್ಯತಂತ್ರ ರೂಪಿಸುತ್ತಿದ್ದಾರೆ. ಬೆಂಗಳೂರಿನಲ್ಲಿ ಸಂಚು ರೂಪಿಸುವ ಬದಲು ವಿದೇಶದಲ್ಲಿ ಸಂಚು ರೂಪಿಸಲಾಗುತ್ತಿದೆ ಎಂದಿದ್ದಾರೆ. ವಿದೇಶದಲ್ಲಿ ಕುಳಿತು ನಮ್ಮ ಸರ್ಕಾರದ ವಿರುದ್ಧ ತಂತ್ರ ರೂಪಿಸುತ್ತಿದ್ದಾರೆ. ನಮಗೆ ಬಂದ ಮಾಹಿತಿ ಪ್ರಕಾರ ಅವರೇನೋ ತಂತ್ರ ಮಾಡುತ್ತಿದ್ದಾರೆ ಎಂದು ಡಿಕೆ ಶಿವಕುಮಾರ್ ಅವರು ವೈದ್ಯಕೀಯ ತಪಾಸಣೆಗಾಗಿ ಸಿಂಗಾಪುರಕ್ಕೆ ತೆರಳಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ. ಇದೆಲ್ಲವೂ ಒಂದು ತಂತ್ರ ಮತ್ತು ನಾನು ಅದರ ಬಗ್ಗೆ ತಿಳಿದುಕೊಂಡಿದ್ದೇನೆ. ಬೆಂಗಳೂರಿನಲ್ಲಿ ಯೋಜನೆಯನ್ನು ಕಾರ್ಯಗತಗೊಳಿಸಿದರೆ ಸಂಚು ಬಯಲಿಗೆ ಬರುವ ಸಾಧ್ಯತೆ ಇರುವುದರಿಂದ ಸಿಂಗಾಪುರದಲ್ಲಿ ತಂತ್ರ ಮಾಡಲಾಗಿದೆ ಎಂದು ಡಿಸಿಎಂ ಹೇಳಿದ್ದಾರೆ.