
Voter ID Scam: ದೂರು ನೀಡಲು ಹೊರಟ್ಟಿದ್ದ ಕಾಂಗ್ರೆಸ್‌ಗೆ ಬಿಜೆಪಿ ಶಾಕ್!
ವೋಟರ್ ಐಡಿ ಹಗರಣ ವಿಚಾರವಾಗಿ ಕಾಂಗ್ರೆಸ್ ಬಿಜೆಪಿ ನಡುವೆ ಸಮರ ಮುಂದುವರಿದಿದೆ. ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ನೀಡಲು ಹೊರಟಿದ್ದ ಕಾಂಗ್ರೆಸ್‌ಗೆ ಬಿಜೆಪಿ ಶಾಕ್ ಕೊಟ್ಟಿದೆ!
ಬೆಂಗಳೂರು (ನ.23): ಬೆಂಗಳೂರಿನ ಮತದಾರರ ಪರಿಷ್ಕರಣೆಯಲ್ಲಿ ನಡೆದಿರುವ ಅಕ್ರಮ ಕುರಿತಂತೆ ಬಿಜೆಪಿ ಮತ್ತು ಕಾಂಗ್ರೆಸ್ ನಡುವಿನ ಜಟಾಪಟಿ ಮತ್ತಷ್ಟು ತೀವ್ರಗೊಂಡಿದ್ದು, ಈ ನಡುವೆ 2013ರಿಂದ ಮತದಾರರ ಪರಿಷ್ಕರಣೆಯಲ್ಲಿ ಸಮಗ್ರ ತನಿಖೆ ನಡೆಸುವಂತೆ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ. ಹೌದು! ಮತದಾರರ ಮಾಹಿತಿ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕರು ಈಗಾಗಲೇ ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದು, ಇಂದು ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ನೀಡುತ್ತಿರುವ ಹಿನ್ನೆಲೆಯಲ್ಲಿ ನಿನ್ನೆ (ಮಂಗಳವಾರ) ರಾತ್ರಿಯೇ ಬಿಜೆಪಿಯಿಂದ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ. ಈ ದೂರಿನಲ್ಲಿ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಚಿಲುಮೆ ಸಂಸ್ಥೆಗೆ ಅನುಮತಿ ನೀಡಿರುವ ವಿಚಾರಗಳನ್ನು ಉಲ್ಲೇಖಿಸಲಾಗಿದೆ.