ಪಂಚಮಸಾಲಿ ಹೋರಾಟಕ್ಕೆ ಕೆ.ಎಸ್. ಶಿವರಾಮು ಬೆದರಿಕೆ; ದೂರು ದಾಖಲು
ಪಂಚಮಸಾಲಿ ಸಮುದಾಯದ 2ಎ ಮೀಸಲಾತಿ ಹೋರಾಟಕ್ಕೆ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಅಧ್ಯಕ್ಷ ಕೆ.ಎಸ್. ಶಿವರಾಮು ಕಿಡಿ ಕಾರಿದ್ದಾರೆ. ಜಯಮೃತ್ಯುಂಜಯ ಸ್ವಾಮೀಜಿಗೆ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಬೆಂಗಳೂರು/ಮೈಸೂರು (ಡಿ.15): ಪಂಚಮಸಾಲಿ ಹೋರಾಟಕ್ಕೆ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಅಧ್ಯಕ್ಷ ಕೆ.ಎಸ್. ಶಿವರಾಮು ಕಿಡಿ ಕಾರಿದ್ದಾರೆ. ನಮ್ಮ ಅನ್ನದ ತಟ್ಟೆಗೆ ಕೈ ಹಾಕಿದ್ರೆ ಕೈ ಕತ್ತರಿಸುತ್ತೇವೆ ಎಂದು ಕೂಡಲಸಂಗಮ ಪಂಚಮಸಾಲಿ ಮಠದ ಜಯಮೃತ್ಯುಂಜಯ ಸ್ವಾಮೀಜಿಗೆ ಕೆ.ಎಸ್ ಶಿವರಾಮು ಎಚ್ಚರಿಕೆ ನೀಡಿದ್ದರು. ಜಯಮೃತ್ಯುಂಜಯ ಹಾಗೂ ಪಂಚಮಸಾಲಿ ಸಮುದಾಯದಕ್ಕೆ ಬೆದರಿಕೆ ಹಿನ್ನೆಲೆಯಲ್ಲಿ ಪಂಚಮಸಾಲಿ ಸಮುದಾಯದವರಿಂದ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ.
ರಾಜ್ಯದಲ್ಲಿ ಕಳೆದ 30 ವರ್ಷಗಳಿಂದ ಪಂಚಮಸಾಲಿ ಸಮುದಾಯಕ್ಕೆ ಹಿಂದುಳಿದ ವರ್ಗದ 2ಎ ಮೀಸಲಾತಿ ನೀಡಬೇಕೆಂಬ ಆಗ್ರಹ ಕೇಳಿಬರುತ್ತಿದೆ. ಈ ಕುರಿರು ಕಳೆದ ಐದಾರು ವರ್ಷಗಳಿಂದ ಪಂಚಮಸಾಲಿ ಸಮುದಾಯಗಳಿಂದ 2ಎ ಮೀಸಲಾತಿಗೆ ಆಗ್ರಹಿಸಿ ದೊಡ್ಡ ಮಟ್ಟದ ಪಾದಯಾತ್ರೆ, ಹೋರಾಟ, ಚಳುವಳಿ, ಉಪವಾಸ ಸತ್ಯಾಗ್ರಹ, ಧರಣಿ ಸೇರಿದಂತೆ ವಿವಿಧ ರೀತಿಯಲ್ಲಿ ಸರ್ಕಾರದ ಮೇಲೆ ಒತ್ತಡ ಹೇರುತ್ತಲೇ ಬರಲಾಗಿದೆ. ಕಳೆದೊಂದು ವಾರದಲ್ಲಿ ಬೆಳಗಾವಿಯಲ್ಲಿ ನಡೆಯುತ್ತಿರುವ ಪಂಚಮಸಾಲಿ 2ಎ ಮೀಸಲಾಲಿ ಚಳುವಳಿ ಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ ಬಂದು ಪ್ರತಿಭಟನಾಕಾರರ ಸಮಸ್ಯೆ ಆಲಿಸಲಿಲ್ಲವೆಂದು ಸುವರ್ಣ ಸೌಧಕ್ಕೆ ಪ್ರತಿಭಟನಾಕಾರರು ನುಗ್ಗಲು ಯತ್ನಿಸಿದ್ದರು. ಈ ವೇಳೆ ಪೊಲೀಸರು ಲಾಠಿ ಚಾರ್ಜ್ ನಡೆಸಿ ತಡೆಗಟ್ಟಿದ್ದರು.
ಇದನ್ನೂ ಓದಿ: 25 ವರ್ಷಗಳ ನಂತರ ರಾಜಕೀಯ ತಿರುವು ಕೊಟ್ಟ ಡಿ.ಕೆ. ಶಿವಕುಮಾರ್ ಹೇಳಿಕೆ!
ಇದರ ಬೆನ್ನಲ್ಲಿಯೇ ರಾಜ್ಯದಲ್ಲಿ ಮೀಸಲಾತಿ ಹೋರಾಟದ ಕುರಿತು ಪರ-ವಿರೋಧ ಚರ್ಚೆ ನಡೆಯುತ್ತಿರುವಾಗಲೇ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಅಧ್ಯಕ್ಷ ಕೆ.ಎಸ್. ಶಿವರಾಮು ಅವರು ನಮ್ಮ ಅನ್ನದ ತಟ್ಟೆಗೆ ಕೈ ಹಾಕಿದರೆ ಕೈ ಕತ್ತರಿಸುತ್ತೇವೆ ಎಂದು ಹೇಳುವ ಮೂಲಕ ಹಿಂದುಳಿದ ವರ್ಗದ ಮೀಸಲಾತಿ ಕೇಳದಂತೆ ಪಂಚಮಸಾಲಿ ಸಮುದಾಯಕ್ಕೆ ಎಚ್ಚರಿಕೆ ರವಾನಿಸಿದ್ದರು. ಈ ಕುರಿತು ಇದೀಗ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.