ಕೊನೆಯ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ಬೌಲಿಂಗ್ ಆಯ್ಕೆ; ಟೀಂ ಇಂಡಿಯಾದಲ್ಲಿ 3 ಮಹತ್ವದ ಬದಲಾವಣೆ!
ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರನೇ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್ ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡಿದೆ. ಚಾಂಪಿಯನ್ಸ್ ಟ್ರೋಫಿಗೂ ಮುನ್ನ ಉಭಯ ತಂಡಗಳು ಕೆಲವು ಪ್ರಯೋಗಗಳನ್ನು ಮಾಡಿಕೊಳ್ಳಲಿವೆ. ಭಾರತ ತಂಡದಲ್ಲಿ ಜಡೇಜಾ, ಶಮಿ ಮತ್ತು ವರುಣ್ ಚಕ್ರವರ್ತಿ ಬದಲಿಗೆ ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್ ಮತ್ತು ಅರ್ಶದೀಪ್ ಸಿಂಗ್ ಆಡಲಿದ್ದಾರೆ.

ಅಹಮದಾಬಾದ್: ಭಾರತ ಹಾಗೂ ಇಂಗ್ಲೆಂಡ್ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಮೂರನೇ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡದ ನಾಯಕ ಜೋಸ್ ಬಟ್ಲರ್ ಮೊದಲು ಬೌಲಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ. ಮೊದಲೆರಡು ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡಿದ್ದ ಇಂಗ್ಲೆಂಡ್ ಸೋಲು ಅನುಭವಿಸುವ ಮೂಲಕ ಇನ್ನೂ ಒಂದು ಪಂದ್ಯ ಬಾಕಿ ಇರುವಾಗಲೇ ಸರಣಿ ಕೈಚೆಲ್ಲಿತ್ತು. ಇದೀಗ ಔಪಚಾರಿಕ ಎನಿಸಿಕೊಂಡಿರುವ ಪಂದ್ಯದಲ್ಲಿ ಇಂಗ್ಲೆಂಡ್ ಮೊದಲು ಬೌಲಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದೆ.
ಐಸಿಸಿ ಚಾಂಪಿಯನ್ಸ್ ಟ್ರೋಫಿಗೂ ಮುನ್ನ ಉಭಯ ತಂಡಗಳು ಆಡಲಿರುವ ಕೊನೆಯ ಏಕದಿನ ಪಂದ್ಯ ಇದಾಗಿದ್ದು. ಕೆಲವು ಪ್ರಯೋಗಗಳಿಗೆ ಮುಂದಾಗಿದೆ. ಹೀಗಾಗಿ ಟೀಂ ಇಂಡಿಯಾ ಪ್ರಮುಖ ಮೂರು ಬದಲಾವಣೆಗಳೊಂದಿಗೆ ಈ ಪಂದ್ಯದಲ್ಲಿ ಕಣಕ್ಕಿಳಿದಿದೆ. ಅನುಭವಿ ಆಟಗಾರರಾದ ರವೀಂದ್ರ ಜಡೇಜಾ ಹಾಗೂ ಮೊಹಮ್ಮದ್ ಶಮಿಗೆ ವಿಶ್ರಾಂತಿ ನೀಡಲಾಗಿದೆ. ಇನ್ನು ವರುಣ್ ಚಕ್ರವರ್ತಿ ಫಿಟ್ನೆಸ್ ಸಮಸ್ಯೆಯಿಂದಾಗಿ ಮೂರನೇ ಏಕದಿನ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ. ಹೀಗಾಗಿ ಈ ಮೂವರ ಬದಲಿಗೆ ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್ ಹಾಗೂ ಅರ್ಶದೀಪ್ ಸಿಂಗ್ ಭಾರತ ತಂಡದ ಆಡುವ ಹನ್ನೊಂದರ ಬಳಗ ಕೂಡಿಕೊಂಡಿದ್ದಾರೆ.
ಇನ್ನೊಂದೆಡೆ ಮೊದಲೆರಡು ಪಂದ್ಯ ಸೋತು ವೈಟ್‌ವಾಷ್ ಆಗುವ ಭೀತಿಗೆ ಸಿಲುಕಿರುವ ಇಂಗ್ಲೆಂಡ್ ತಂಡದಲ್ಲಿ ಕೂಡಾ ಒಂದು ಬದಲಾವಣೆ ಮಾಡಲಾಗಿದ್ದು, ಜೇಮಿ ಓವರ್‌ಟನ್ ಬದಲಿಗೆ ಟಾಮ್ ಬಾಂಟನ್ ಇಂಗ್ಲೆಂಡ್ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆದಿದ್ದಾರೆ.
ಉಭಯ ತಂಡಗಳು ಹೀಗಿವೆ ನೋಡಿ:
ಭಾರತ
ರೋಹಿತ್ ಶರ್ಮಾ(ನಾಯಕ), ಶುಭ್‌ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆ ಎಲ್ ರಾಹುಲ್, ಅಕ್ಷರ್ ಪಟೇಲ್, ಹಾರ್ದಿಕ್ ಪಾಂಡ್ಯ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಅರ್ಶದೀಪ್ ಸಿಂಗ್, ಹರ್ಷಿತ್ ರಾಣಾ
ಇಂಗ್ಲೆಂಡ್
ಫಿಲ್ ಸಾಲ್ಟ್, ಬೆನ್ ಡಕೆಟ್, ಜೋ ರೂಟ್, ಹ್ಯಾರಿ ಬ್ರೂಕ್, ಜೋಸ್ ಬಟ್ಲರ್ (ನಾಯಕ), ಲಿಯಾಮ್ ಲಿವಿಂಗ್‌ಸ್ಟೋನ್, ಮಾರ್ಕ್ ವುಡ್, ಗುಸ್ ಅಟ್ಕಿನ್‌ಸನ್, ಟಾಮ್ ಬಾಂಟನ್, ಸಾಕಿಬ್ ಮೊಹಮದ್, ಆದಿಲ್ ರಶೀದ್
ಪಂದ್ಯ ಆರಂಭ: ಮಧ್ಯಾಹ್ನ 1.30ಕ್ಕೆ
ನೇರಪ್ರಸಾರ: ಸ್ಟಾರ್‌ಸ್ಟೋರ್ಟ್ಸ್, ಹಾಟ್‌ಸ್ಟಾರ್